ಬೆಂಗಳೂರು: ಕೆಎಸ್ಆರ್ಟಿಸಿ ಲೋಗೊ ಬಳಕೆ ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವಿನಹೋರಾಟದಲ್ಲಿ ಕೇರಳಕ್ಕೆ ಜಯವಾಗಿದೆ. ಇನ್ಮುಂದೆ ಲೋಗೋವನ್ನು ಕರ್ನಾಟಕ ಬಳಸುವಂತಿಲ್ಲ ಎಂಬ ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಆದೇಶ ಸತ್ಯಕ್ಕೆ ದೂರವಾಗಿದೆ ಎಂದು ಕೆಎಸ್ಆರ್ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂಡಿ)ಶಿವಯೋಗಿ ಕಳಸದ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ಕೆಎಸ್ಆರ್ಟಿಸಿ” ಎಂದು ಬಳಸುವಂತಿಲ್ಲ ಎಂಬ ಕುರಿತು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ. ಏತನ್ಮಧ್ಯೆ, ಸದರಿ ಮಂಡಳಿಯನ್ನು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ. ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್ಆರ್ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ಮಾರ್ಕ್ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದಿದ್ದಾರೆ.
ಕೇರಳ ಎಸ್ಆರ್ಟಿಸಿಯು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎನ್ನಲಾಗಿತ್ತಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿರುವ ಈ ವಿಚಾರ ಸತ್ಯಕ್ಕೆ ದೂರವಾದ ಹಾಗೂ ಕಾನೂನಾತ್ಮಕವಲ್ಲದ ವರದಿಯಾಗಿದೆ. ಈ ಬಗ್ಗೆ ಕಾನೂನು ಕ್ರಮಗಳನ್ನು ಜರುಗಿಸುವ ನಮ್ಮ ಹಕ್ಕನ್ನು ಸಂಸ್ಥೆಯು ಕಾಯ್ದಿರಿಸಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ