ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಎಂಬ ಹೆಸರಿನ ಸೇನಾ ಕಾರ್ಯಾಚರಣೆ ನಡೆಸಿದ ನಂತರ ನಂತರ ಕದನ ವಿರಾಮ ಜಾರಿಗೆ ಬಂದಿತು.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡಲು ಭಾರತ ಮೇ 7 ರ ಆರಂಭದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ಕನಿಷ್ಠ 100 ಭಯೋತ್ಪಾದಕರು ಕೊಲ್ಲಲ್ಪಟ್ಟರು.
ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ನಡುವಿನ ನಿಗದಿತ ಮಾತುಕತೆಗೂ ಮುನ್ನ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಇದರಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ ಪಾಲ್ಗೊಂಡಿದ್ದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.
ಭಾರತದ ರಾಜತಾಂತ್ರಿಕ ಮತ್ತು ಮಿಲಿಟರಿ ಪ್ರತಿಕ್ರಿಯೆಯನ್ನು ಪರಿಶೀಲಿಸಲು ಪ್ರಧಾನಿಯವರು ನವದೆಹಲಿಯ ತಮ್ಮ ನಿವಾಸದಲ್ಲಿ ಉನ್ನತ ಸರ್ಕಾರಿ ಮತ್ತು ರಕ್ಷಣಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ