ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚಿಸಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಈ ರೀತಿಯ ಘಟನೆಗಳು ಬೇರೆ ಯಾವುದಾದರೂ ಜಿಲ್ಲೆಯಲ್ಲಿಯೂ ಸಂಭವಿಸಿರುವ ಸಾಧ್ಯತೆ ಇರುವುದರಿಂದ ಆ ಜಿಲ್ಲೆಗಳಲ್ಲಿ ಔಷಧಿ ಸರಬರಾಜು ಬಗ್ಗೆಯೂ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಲೋಕಾಯುಕ್ತರು ಸೂಚಿಸಿದ್ದಾರೆ.
ಅಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸರಣಿ ಸಾವಿನ ಬಗ್ಗೆ ಹಗೂ ಈ ಕೃತ್ಯಕ್ಕೆ ಕಾರಣರಾದವರ ಮೇಲೆ ಹಾಗೂ ದುರ್ಘಟನೆಗೆ ಕಾರಣವಾದ ಔಷಧವವನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಪಶ್ಚಿಮ ಬಂಗಾಳದ ಕಂಪನಿಯೊಂದು ಸರಬರಾಜು ಮಾಡಿದ್ದ ಕಳಪೆ ಗುಣಮಟ್ಟದ ಐವಿ ದ್ರಾವಣದಿಂದ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆರು ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ