ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಜೂನ್‌ 11ರಿಂದ ಕೆಲವು ಷರತ್ತುಗಳೊಂದಿಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಆಡಳಿತಾತ್ಮಕ ಅನುಮೋದನೆ ನೀಡಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಆದೇಶ ಹೊರಡಿಸಿದ್ದಾರೆ.
ಉಚಿತ ಪ್ರಯಾಣಕ್ಕೆ ಸಾರಿಗೆ ಇಲಾಖೆಯ ಷರತ್ತುಗಳು
ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸುತ್ತದೆ.
ರಾಜ್ಯ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳ ಐಷಾರಾಮಿ ಬಸ್ಸುಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯು ವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್(ಎಸಿ ಬಸ್‌ಗಳು) ಬಸ್‍ಗಳಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್‌ ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಬಸ್‍ಗಳಲ್ಲಿ(ಎಸಿ, ಐಷರಾಮಿ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುತ್ತದೆ.
ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
ಶಕ್ತಿ ಸ್ಮಾರ್ಟ್ ಕಾರ್ಡ್‍ನ್ನು ವಿತರಿಸುವ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆ, ಸರಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement