ಬೆಂಗಳೂರು: ರಾಜ್ಯದ ಕರಲವು ಜಿಲ್ಲೆಗಳಲ್ಲಿ ಆಗಸ್ಟ್ 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿವೆ.
ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ. ಈ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮೇಲ್ಮೈ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ