ಕರ್ನಾಟಕ ಸಿಇಟಿ : ಪುನರಾವರ್ತಿತ ವಿದ್ಯಾರ್ಥಿಗಳ ದ್ವಿತೀಯ ಪಿಯು-ಸಿಇಟಿಯ ತಲಾ ಶೇ. 50 ಅಂಕ ಪರಿಗಣಿಸಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ. 50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಶನಿವಾರ ಮಹತ್ವದ ತೀರ್ಪು ಪ್ರಕಟಿಸಿದೆ.
2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು (ಪುನರಾವರ್ತಿತ ವಿದ್ಯಾರ್ಥಿಗಳು) ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದು ಹೇಳಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌ ಈಶ್ವರ್‌ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶನಿವಾರ ಪ್ರಕಟಿಸಿತು.

ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಕೆಇಎ ಜುಲೈ 30ರಂದು ಮಾಡಿದ್ದ ಆಕ್ಷೇಪಾರ್ಹವಾದ ಆದೇಶವನ್ನು ವಜಾ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದ ಶೇ. 50ರಷ್ಟು ಅಂಕಗಳು ಹಾಗೂ ಸಿಇಟಿಯಲ್ಲಿ ಪಡೆದ ಶೇ. 50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ‍್ಯಾಂಕ್ ಪಟ್ಟಿಯನ್ನು ಕೆಇಎ ಪ್ರಕಟಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಪುನರಾವರ್ತಿ ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದೇ ಸಿಇಟಿ ರ‍್ಯಾಂಕ್ ಪಟ್ಟಿ ಪ್ರಕಟಿಸಿರುವುದು ಸಿಇಟಿ-2006ರ ಪ್ರವೇಶ ನಿಯಮಗಳ ಉಲ್ಲಂಘನೆಯಾಗಿದೆ. ಹೀಗೆ ಮಾಡುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳ ರ‍್ಯಾಂಕಿಂಗ್‌ ಕಡಿಮೆಯಾಗಲಿದೆ. ಇದು ಪೂರ್ವಾಗ್ರಹದಿಂದ ಕೂಡಿದ್ದ, ಅಸಮಾನವಾಗಿದ್ದು, ನ್ಯಾಯಸಮ್ಮತವಲ್ಲ. ಅಲ್ಲದೇ, ಸ್ವಾಭಾವಿಕ ನ್ಯಾಯತತ್ವಕ್ಕೆ ವಿರುದ್ಧವಾದ ಕ್ರಮ ಎಂದು ಅರ್ಜಿದಾರರು ವಾದಿಸಿದ್ದರು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಿ ಆರ್‌ ರವಿಶಂಕರ್‌, ವಕೀಲರಾದ ಶತಭಿಷ್‌ ಶಿವಣ್ಣ ಮತ್ತಿತರರು ವಾದಿಸಿದ್ದರು. ಕೆಇಎಯನ್ನು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಪ್ರತಿನಿಧಿಸಿದ್ದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement