ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು ; ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ.
ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಬಿಜೆಪಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಅಕ್ಟೋಬರ್‌ 26 ರಂದು ಆದೇಶ ಕಾಯ್ದಿರಿಸಿತ್ತು. ಪೀಠ ಶುಕ್ರವಾರ (ನವೆಂಬರ್‌ 10) ಆದೇಶವನ್ನು ಪ್ರಕಟಿಸಿತು.
ಕೋಲಾರದ ಚಂದನ ಎನ್‌. ವಿ. ಸೇರಿದಂತೆ ನೂರಾರು ಅಭ್ಯರ್ಥಿಗಳು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಹೈಕೋರ್ಟ್‌ ತಡೆ ವಿಧಿಸಿತ್ತು. ಈಗ ಎಲ್ಲಾ ಅರ್ಜಿಗಳನ್ನು   ನ್ಯಾಯಾಲಯ ವಜಾ ಮಾಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ರಾಜ್ಯ ಸರ್ಕಾರವು 2022ರ ಏಪ್ರಿಲ್‌ 29ರಂದು ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ.ಎಸ್‌. ರಾಜಗೋಪಾಲ, ಡಿ.ಆರ್‌. ರವಿಶಂಕರ, ಕೆ.ಎನ್‌. ಫಣೀಂದ್ರ, ವಕೀಲ ಸಂತೋಷಕುಮಾರ ನಗರ್ಲೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದರು.

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ..
ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷಾ ಅಕ್ರಮದ ಹಗರಣದಲ್ಲಿ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ. ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ ಪಾಲ್ ಸೇರಿದಂತೆ ಹಲವು ಆರೋಪಿಗಳನ್ನು ಸಿಐಡಿ ಬಂಧಿಸಿತ್ತು. ಅಮೃತ್ ಪಾಲ್ ಅವರನ್ನು ಜುಲೈ 4, 2022 ರಂದು ಸಿಐಡಿ ಬಂಧಿಸಿತ್ತು. ನಂತರ ಕಳೆದ ಸೆಪ್ಟೆಂಬರ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement