ಬಂಟ್ವಾಳ | ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು; ಕೆಲವರಿಗೆ ಗಾಯ

ಮಂಗಳೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಬಳಿ ಬುಧವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಬಸ್ ಬುಧವಾರ ಸಂಜೆ ಶಾಲೆ ಮಕ್ಕಳನ್ನು ಬಿಡಲು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.ಘಟನೆಯಲ್ಲಿ ಯುಕೆಜಿ ಓದುತ್ತಿದ್ದ ಬಾಲಕಿ ಚಿರನ್ವಿ (೬) ಮೃತಪಟ್ಟಿದ್ದಾಳೆ. ಗಾಯಗೊಂಡ ನಾಲ್ವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತೀವ್ರ ಗಾಳಿ ಮಳೆಯಿಂದಾಗಿ ಮರ ಉರುಳಿ ಬಿದ್ದಿದ್ದರಿಂದ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮರ ಬಿದ್ದ ತೀವ್ರತೆಗೆ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement