ರೈತನ ಆತ್ಮಹತ್ಯೆ ಸುಳ್ಳು ಸುದ್ದಿ ಟ್ವೀಟ್‌ ಮಾಡಿದ ಆರೋಪ ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ.
ಹಾವೇರಿ ಸೆನ್‌ (ಸೈಬರ್‌, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ-1 ಬಿ ಎ ಬೆಳ್ಳಿಯಪ್ಪ ಅವರು “ತೇಜಸ್ವಿ ಸೂರ್ಯ ಅವರು ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಪ್ರಟಿಸಿದ್ದಾರೆ. ತೇಜಸ್ವಿ ಅವರು ಮಾಡಿರುವ ಟ್ವೀಟ್‌ ಸಮುದಾಯಗಳ ನಡುವೆ ದ್ವೇಷ ಹರಡುವ ಕೃತ್ಯವಾಗಿದೆ. ಹೀಗಾಗಿ, ಅರ್ಜಿದಾರರ ಮನವಿ ವಜಾ ಮಾಡಬೇಕು ಹಾಗೂ ತನಿಖೆಗೆ ಅನುಮತಿ ನೀಡಬೇಕು” ಎಂದು ಕೋರಿದ್ದರು.

ಪ್ರಮುಖ ಸುದ್ದಿ :-   ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ತೇಜಸ್ವಿ ಸೂರ್ಯರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಮ ಅವರು “ಹಾವೇರಿ ಜಿಲ್ಲಾ ಪೊಲೀಸರು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದ ಬೆನ್ನಿಗೇ ತೇಜಸ್ವಿ ತಮ್ಮ ಟ್ವೀಟ್‌ ಡಿಲೀಟ್‌ ಮಾಡಿದ್ದಾರೆ. ವೆಬ್‌ ಪೋರ್ಟ್‌ಲ್‌ ವರದಿ ಆಧರಿಸಿ ಸೂರ್ಯ ಟ್ವೀಟ್‌ ಮಾಡಿದ್ದಾರೆ. ಮೃತಪಟ್ಟ ರೈತನ ತಂದೆಯ ಸಂದರ್ಶನ ಸುದ್ದಿಯಾಗಿತ್ತು. ಅದನ್ನು ಲಗತ್ತಿಸಿ ಟ್ವೀಟ್‌ ಸೂರ್ಯ ಅವರು ಮಾಡಿದ್ದರು. ಇದರಲ್ಲಿ ಯಾವುದೇ ಬೇರೆ ಉದ್ದೇಶ ಇರಲಿಲ್ಲ” ಎಂದು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನಂತರ ಹೈಕೋರ್ಟ್‌ ಏಕಸದಸ್ಯ ಪೀಠವು ಎಫ್‌ಐಆರ್‌ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆಯನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ: ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎರಡು ಡಿಜಿಟಲ್‌ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಿಸಲಾಗಿತ್ತು. ಇದನ್ನು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಅವರ ವಿರುದ್ಧ ಹಾವೇರಿಯ ಸೆನ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 353 (2) ಅಡಿ (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುವ ಸುಳ್ಳು ಸುದ್ದಿ ಹರಡಿದ ಆರೋಪ) ಎಫ್‌ಐಆರ್‌ ದಾಖಲಿಸಲಾಗಿತ್ತು.

ಪ್ರಮುಖ ಸುದ್ದಿ :-   ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement