ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ: ವರ್ಗಾವಣೆ ರದ್ದತಿ ಸಾಧ್ಯವಿಲ್ಲವೆಂದ ಬಿಎಸ್‌ವೈ

ಬೆಂಗಳೂರು: ತನ್ನ ವರ್ಗಾವಣೆ ತಡೆ ಕೋರಿ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರ ಬಹಿರಂಗ ತಿಕ್ಕಾಟಕ್ಕೆ ಬ್ರೇಕ್​ ಹಾಕಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಹಿಡಿಯುವಂತೆ ಮನವಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಮೈಸೂರಿನಲ್ಲಿ ಇಬ್ಬರು ಐಎಎಸ್​ ಅಧಿಕಾರಿಗಳ ಕಿತ್ತಾಟ ಕೊನೆಗೂ ವರ್ಗಾವಣೆ ಮೂಲಕ ತಾರ್ಕಿಕ ಅಂತ್ಯ ಕಂಡಿದೆ. ರಾಜ್ಯ ಸರ್ಕಾರ ತಡರಾತ್ರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಅವರನ್ನು ಎತ್ತಂಗಡಿ ಮಾಡಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದರೆ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಸರ್ಕಾರದ ಈ ನಿರ್ಧಾರ ರೋಹಿಣಿ ಸಿಂಧೂರಿ ಅವರಿಗೆ ಬೇಸರ ಉಂಟುಮಾಡಿದೆ. ಹೀಗಾಗಿ ರೋಹಿಣಿ ಭಾಣುವಾರ ಬೆಳಿಗ್ಗೆಯೇ ಸಿಎಂ ಬಿಎಸ್​ ಯಡಿಯೂರಪ್ಪನವರನ್ನು ಭೇಟಿ ಮಾಡಲು ಮುಂದಾಗಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ ಮುಖ್ಯಮಂತ್ರಿಗಳ ಕಾದರು. ಬಳಿಕ ಭೇಟಿ ಮಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ವರ್ಗಾವಣೆ ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದರು.
ಈ ಪ್ರಕರಣದಲ್ಲಿ ತನ್ನಿಂದ ತಪ್ಪು ನಡೆದಿಲ್ಲ ಎಂದು ರೋಹಿಣಿ ಸಿಂಧೂರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಆದರೆ ಯಡಿಯೂರಪ್ಪ ಮಾತ್ರ ಯಾವುದೇ ಕಾರಣಕ್ಕೂ ವರ್ಗಾವಣೆ ತಡೆಹಿಡಿಯಲು ಅಸಾಧ್ಯ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆಗಿದೆ, ಅದಕ್ಕೆ ಭೇಟಿಗೆ ಬಂದಿದ್ದರು. ಒಂದು ಸಲ ವರ್ಗಾವಣೆ ಆದ ಮೇಲೆ ಮರು ಪರಿಶೀಲನೆ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement