ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಇಲ್ಲಿನ ಭಾಂಗರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನೆನ್ನಲಾದ ರಫಿಕುಲ್ ಇಸ್ಲಾಂ ಎಂಬುವವರ ಮನೆಯಿಂದ ಪೊಲೀಸರು ಸುಮಾರು 100 ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟ ಮಾಹಿತಿ ಮೆರೆಗೆ ರಫಿಕುಲ್ ಇಸ್ಲಾಂ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು, ಬಚ್ಚಿಟ್ಟಿದ್ದ ಈ ಮಾರಕಾಸ್ತ್ರಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ಎಚ್ಚರಿಕೆ
ಈ ಬೆಳವಣಿಗೆಯ ಬೆನ್ನಲ್ಲೇ ಚುನಾವಣಾ ಆಯೋಗವು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ. “ಯಾವುದೇ ವ್ಯಾಪ್ತಿಯಲ್ಲಿ ಸ್ಫೋಟಕಗಳು ಪತ್ತೆಯಾದರೆ ಅಥವಾ ಮತದಾರರಿಗೆ ಬೆದರಿಕೆ ಹಾಕುವ ಘಟನೆಗಳು ಸಂಭವಿಸಿದರೆ, ಅದಕ್ಕೆ ಸಂಬಂಧಪಟ್ಟ ಡಿಸಿಪಿ, ಎಸ್ಪಿ ಹಾಗೂ ಓಸಿ (OC) ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಆಯೋಗದ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಬಿಗಿ ಭದ್ರತೆ, ತೀವ್ರ ನಿಗಾ
ಮತದಾರರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಭದ್ರತಾ ಪಡೆಗಳಿಂದ ‘ಏರಿಯಾ ಡಾಮಿನೇಷನ್’ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಏಪ್ರಿಲ್ 23ರಂದು ಮೊದಲ ಹಂತದ ಮತದಾನ ಪೂರ್ಣಗೊಂಡಿದೆ. ಏಪ್ರಿಲ್ 29ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ