ಅಪೆಕ್ಸ್ ಬ್ಯಾಂಕಿಗೆ ₹439 ಕೋಟಿ ಸಾಲ ಮರುಪಾವತಿಸದ ಪ್ರಕರಣ: ತನಿಖೆಗೆ ಸಹಕರಿಸಲು ಶಾಸಕ ರಮೇಶ ಜಾರಕಿಹೊಳಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಸಹಕರಿಸುವಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅಲ್ಲದೆ, ಬಂಧನದಂಥ ಕ್ರಮಕ್ಕೆ ಮುಂದಾಗುವಾಗ ನ್ಯಾಯಾಲಯದ ಅನುಮತಿ ಪಡೆಯುವುದು ಕಡ್ಡಾಯ ಎಂದು ಶುಕ್ರವಾರ ಆದೇಶಿಸಿದೆ.
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ಗೆ 439 ಕೋಟಿ ರೂಪಾಯಿ ಸಾಲ ಮರುಪಾವತಿಸದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಸಿಐಡಿ ನಡೆಸುತ್ತಿರುವ ತನಿಖೆ ರದ್ದುಪಡಿಸುವಂತೆ ಕೋರಿ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

“ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಅರ್ಜಿದಾರರ ಕೋರಿಕೆಯ ಮೇರೆಗೆ ಸಿಐಡಿಯನ್ನು ಪ್ರಕರಣದಲ್ಲಿ ಮೂರನೇ ಪ್ರತಿವಾದಿಯಾಗಿ ಸೇರ್ಪಡೆ ಮಾಡಲು ಅನುಮತಿಸಲಾಗಿದೆ. ಅಲ್ಲದೇ, ಪ್ರಕರಣ ನಿರ್ಧಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿಲು ಕೋರಿರುವ ಮನವಿಯನ್ನು ಪುರಸ್ಕರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ/ಆರೋಪಿಗಳನ್ನು ನ್ಯಾಯಾಲಯದ ಅನುಮತಿ ಇಲ್ಲದೇ ತನಿಖಾ ಸಂಸ್ಥೆ ಬಂಧಿಸಬಾರದು. ಅರ್ಜಿದಾರ/ಆರೋಪಿಗಳು ತನಿಖೆಗೆ ಸಹಕರಿಸಬೇಕು” ಎಂದು ಪೀಠವು ನಿರ್ದೇಶಿಸಿದೆ.

ಪ್ರಮುಖ ಸುದ್ದಿ :-   ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಬೃಹತ್ ಪ್ರತಿಭಟನೆ

.ಪ್ರಕರಣದ ಹಿನ್ನೆಲೆ:
ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಿಂದ 2011ರಿಂದ 2017ರ ಅವಧಿಯಲ್ಲಿ 232.88 ಕೋಟಿ ರೂಪಾಯಿ ಸಾಲ ಪಡೆಯಲಾಗಿತ್ತು. ಸಕಾಲಕ್ಕೆ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಅಸಲು ಹಾಗೂ ಬಡ್ಡಿ ಸೇರಿ 439.7 ಕೋಟಿ ರೂಪಾಯಿ ಆಗಿದೆ. ಸಾಲ ಪಡೆಯುವ ವೇಳೆ ಸಕ್ಕರೆ ಕಾರ್ಖಾನೆಗೆ ರಮೇಶ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಆದರೆ, ಸಾಲ ಬಾಕಿಯಿರುವ ಅವಧಿಯಲ್ಲೇ ರಮೇಶ್‌ ಜಾರಕಿಹೊಳಿ ನಿರ್ದೇಶಕರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಹುದ್ದೆಗಳಿಗೆ ಬೇರೆಯವರು ನೇಮಕಗೊಂಡಿದ್ದಾರೆ. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಹಾಗೂ ಸಾಲ ಮರು ಪಾವತಿಸದೆ ವಂಚಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ಬೆಂಗಳೂರಿನ ವಿ.ವಿ ಪುರಂ ಠಾಣೆಗೆ ದೂರು ನೀಡಿದ್ದರು. ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಗೃಹ ಇಲಾಖೆ ಆದೇಶಿಸಿತ್ತು. ತಮ್ಮ ವಿರುದ್ಧದ ಎಫ್‌ಐಆರ್‌ ಹಾಗೂ ಸಿಐಡಿ ತನಿಖೆ ರದ್ದು ಕೋರಿ ರಮೇಶ ಜಾರಕಿ ಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಕುಂಬೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement