ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಆರೋಪಗಳ ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಎಡಿಜಿಪಿ ಆರ್ ಹಿತೇಂದ್ರ ನೇಮಕ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆರ್. ಹಿತೇಂದ್ರ ಅವರನ್ನು ನೇಮಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಧಾರವಾಡ ಪೀಠವು ವಿಚಾರಣೆ ನಡೆಸಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ, ಎಸ್‌ಐಟಿಯ ಪುನರ್ರಚನೆಗೆ ಸಂಬಂಧಿಸಿದಂತೆ ಪರಿಷ್ಕೃತ ಆದೇಶ ಹೊರಡಿಸಿದೆ ಎಂದು ಬಾರ್‌ ಬೆಂಚ್‌ ವರದಿ ಮಾಡಿದೆ.
ರಾಜ್ಯ ಪೊಲೀಸ್ ಆಡಳಿತ ವಿಭಾಗದ ಎಡಿಜಿಪಿ ಸೋಮೇಂದು ಮುಖರ್ಜಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
2026ರ ಸೆಪ್ಟೆಂಬರ್ 21ರಂದು ಹೈಕೋರ್ಟ್, ಕಾರಾಗೃಹ ಇಲಾಖೆಯ ಎಡಿಜಿಪಿ ಅಲೋಕಕುಮಾರ ನೇತೃತ್ವದಲ್ಲಿ ಐವರು ಸದಸ್ಯರ ಎಸ್‌ಐಟಿ ರಚಿಸಿ ಆದೇಶಿಸಿತ್ತು. ಆದರೆ, ಎಸ್‌ಐಟಿ ಮುಖ್ಯಸ್ಥ ಅಲೋಕಕುಮಾರ ಮತ್ತು ಸದಸ್ಯೆಯಾಗಿದ್ದ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕಿ ಐಜಿಪಿ ಡಾ. ದಿವ್ಯಾ ಗೋಪಿನಾಥನ್ ಅವರನ್ನು ಬದಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೋಮವಾರ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ, ಆರ್ ಹಿತೇಂದ್ರ ಅವರನ್ನು ಎಸ್‌ಐಟಿಯ ನೂತನ ಮುಖ್ಯಸ್ಥರನ್ನಾಗಿ ನೇಮಿಸಿದೆ. ಡಾ. ದಿವ್ಯಾ ಗೋಪಿನಾಥನ್ ಬದಲಿಗೆ ಸೋಮೇಂದು ಮುಖರ್ಜಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿದೆ. ಉಳಿದಂತೆ ಉಪ ಪೊಲೀಸ್ ಆಯುಕ್ತ ಅನೂಪ್ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮತ್ತು ಉಪ ಪೊಲೀಸ್ ಆಯುಕ್ತರಾದ ಶಮಾ ಮಿಶ್ರಾ ಅವರು ಎಸ್‌ಐಟಿ ಸದಸ್ಯರಾಗಿದ್ದಾರೆ.

ಪ್ರಮುಖ ಸುದ್ದಿ :-   ಪ್ರತಿಭಟನೆಯಲ್ಲಿ ಭಾಗಿ : ನಟ ಇಮ್ರಾನ್ ಖಾನ್ ಬೇಷರತ್ ಕ್ಷಮೆಯಾಚನೆ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಆರೋಪಗಳ ಪ್ರಕರಣದಲ್ಲಿ ಎಸ್‌ಐಟಿ ಸ್ವತಂತ್ರ ಹಾಗೂ ವಿಶ್ವಾಸಾರ್ಹ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ರಾಜ್ಯ ಸರ್ಕಾರವು ತನಿಖೆಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಪೀಠ ಆದೇಶಿಸಿದೆ. ಈ ಹಿಂದೆ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಸಿಐಡಿ ಅಧಿಕಾರಿಗಳನ್ನು ಎಸ್‌ಐಟಿಯಲ್ಲಿ ಮುಂದುವರಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಇದೇ ವೇಳೆ, ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಎಸ್‌ಐಟಿ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ತನಿಖೆಗೆ ಅಲೋಕಕುಮಾರ ನೇತೃತ್ವದ ಐವರು ಸದಸ್ಯರ ಎಸ್‌ಐಟಿ ರಚಿಸಿ ಹೈಕೋರ್ಟ್ ಸೆಪ್ಟೆಂಬರ್ 21ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಎಸ್‌ಐಟಿ ಮುಖ್ಯಸ್ಥರು ಮತ್ತು ಮತ್ತೊಬ್ಬ ಸದಸ್ಯರನ್ನು ಬದಲಿಸಲು ಪರ್ಯಾಯ ಅಧಿಕಾರಿಗಳ ಹೆಸರುಗಳನ್ನು ಸೂಚಿಸುವ ಅವಕಾಶವನ್ನು ರಾಜ್ಯ ಸರ್ಕಾರಕ್ಕೆ ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ನಾಲ್ವರು ಅಧಿಕಾರಿಗಳ ಹೆಸರುಗಳನ್ನು ಹೈಕೋರ್ಟ್‌ಗೆ ಸೂಚಿಸಿತ್ತು. ಅವರಲ್ಲಿ ಇಬ್ಬರನ್ನು ಎಸ್‌ಐಟಿಗೆ ನೇಮಕ ಮಾಡಬಹುದು ಎಂದು ತಿಳಿಸಿತ್ತು. ಎಸ್‌ಐಟಿಗೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.

ಪ್ರಮುಖ ಸುದ್ದಿ :-   ಆತ್ಮಹತ್ಯೆ ಮಾಡಿಕೊಳ್ಳಲು ಕಾರನ್ನು 7 ವಾಹನಗಳಿಗೆ ಡಿಕ್ಕಿ ಹೊಡೆಸಿದ ವ್ಯಕ್ತಿ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement