ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹಾಗೂ ಶೀಘ್ರವೇ ಈ ಕುರಿತು ಬೇಗ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.
7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಈ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದೆ.
ಇಂದು ಬುಧವಾರದಿಂದ ಆರಂಭವಾಗಿರುವ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ  ಈ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಆದರೆ ಸರ್ಕಾರದಿಂದ ಅಧಿಕೃತವಾಗಿ ಆದೇಶ ಬಂದ ಬಳಿಕ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದ್ದಾರೆ.ಮಧ್ಯಂತರ ಆದೇಶ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಸರ್ಕಾರಿ ನೌಕರರು ಮುಷ್ಕರ ಹಿಂಪಡೆಯಬೇಕು ಎಂದು ಅವರು ಮನವಿ ಮನವಿ ಮಾಡಿದ್ದಾರೆ.
ಸರ್ಕಾರ ಕೇವಲ ಹೇಳಿ ನೀಡಿದೆ. ಆದರೆ ಯಾವುದೇ ಅಧಿಕೃತ ಆದೇಶ ಇಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಆದೇಶ ಮಾಡುವ ವರೆಗೂ ಮುಷ್ಕರವನ್ನು ವಾಪಸ್ ಪಡೆಯುವುದಿಲ್ಲ. ಸರ್ಕಾರದ ಸ್ಪಷ್ಟತೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಆದರೆ ಸಭೆಯಲ್ಲಿ ಯಾವುದೇ ಫಲಪ್ರದವಾಗಿರಲಿಲ್ಲ. ಈ ನಿಟ್ಟಿನಲ್ಲಿ ಬುಧವಾರ ಮುಷ್ಕರ ಆರಂಭಗೊಂಡ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿಗಳು ಸಭೆ ನಡೆಸಿ ತುರ್ತು ತೀರ್ಮಾನ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ಸರ್ಕಾರದಿಂದ ಆದೇಶ…

ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿ ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರ ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಆತನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಆತನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶ ಹೇಳಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಅಲ್ಲದೆ, ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ. ಸ್ಥಳೀಯ ಸಂಸ್ಥೆಗಳ (ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ) ನೌಕರರಿಗೆ ಸೌಲಭ್ಯ ಮಂಜೂರು ಮಾಡುವುದರಿಂದ ಉಂಟಾಗುವ ವೆಚ್ಚವನ್ನು ಅನ್ವಯಿಸುವ ಸ್ಥಳೀಯ ಸಂಸ್ಥೆಗಳೇ ಭರಿಸತಕ್ಕದ್ದು ಎಂದು ಆದೇಶ ಹೇಳಿದೆ.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement