ಸಂಗ್ರೂರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ಕಚೇರಿಗೆ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಪಂಜಾಬ್ನ ಸಂಗ್ರೂರಿನಲ್ಲಿ ನಡೆದಿದೆ. ಈ ದಾಳಿಯಿಂದ ಕಚೇರಿಯ ಹೊರಗೋಡೆಯಲ್ಲಿ ಸುಟ್ಟ ಗುರುತುಗಳು ಕಂಡುಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಅಥವಾ ಯಾರಿಗೂ ಗಾಯಗಳಾಗಿಲ್ಲ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ತುಂಬಿದ್ದ ಗಾಜಿನ ಬಾಟಲಿಯನ್ನು ಬಿಜೆಪಿ ಕಚೇರಿಯತ್ತ ಎಸೆದಿದ್ದಾನೆ. ಬಾಟಲಿ ಕಚೇರಿಯ ಹೊರಗೋಡೆಗೆ ಬಡಿದು ಬೆಂಕಿ ಹೊತ್ತಿಕೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪೆಟ್ರೋಲ್ ಬಾಂಬ್ ಆಗಿ ಬಳಸಲಾದ ಗಾಜಿನ ಬಾಟಲಿಯ ಅವಶೇಷಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ಬಿಜೆಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿ ಒಬ್ಬನೇ ಕೃತ್ಯ ಎಸಗಿದ್ದಾನೆಯೇ ಅಥವಾ ಆತನೊಂದಿಗೆ ಇತರರು ಕೂಡ ಇದ್ದಾರೆಯೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ.
ಈ ಕುರಿತು ಮಾತನಾಡಿದ ಸಂಗ್ರೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದಿವೇಂದ್ರ ಅತ್ರಿ, ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸ್ಥಳದಿಂದ ಸಂಗ್ರಹಿಸಿದ ಸಾಕ್ಷ್ಯಗಳ ವೈಜ್ಞಾನಿಕ ವಿಶ್ಲೇಷಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
“ನಾವು ಘಟನಾ ಸ್ಥಳವನ್ನು ಪರಿಶೀಲಿಸುತ್ತಿದ್ದೇವೆ. ಬಿಯರ್ ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಅದನ್ನು ಪೆಟ್ರೋಲ್ ಬಾಂಬ್ ಆಗಿ ಬಳಸಲಾಗಿದೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅವರನ್ನು ಶೀಘ್ರವೇ ಬಂಧಿಸಲಾಗುವುದು ” ಎಂದು ದಿವೇಂದ್ರ ಅತ್ರಿ ತಿಳಿಸಿದ್ದಾರೆ.
ಇದೇ ವೇಳೆ, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ (ಫೊರೆನ್ಸಿಕ್) ತಜ್ಞರ ತಂಡ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ. ಆರೋಪಿಗಳ ಸುಳಿವು ಪತ್ತೆಹಚ್ಚಲು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿ ಪ್ರಶ್ನೆ
ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ಇದು ಪೂರ್ವಯೋಜಿತ ದಾಳಿ ಎಂದು ಆರೋಪಿಸಿದ್ದು, ಪಂಜಾಬ್ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯನ್ನು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕ ರಣದೀಪ ದಿಯೋಲ್ ಮಾಧ್ಯಮಗಳೊಂದಿಗೆ ಮಾತನಾಡಿ, “ಕಳೆದ ರಾತ್ರಿ ಇಬ್ಬರು ಯುವಕರು ಕಚೇರಿಯ ಬಳಿ ಬಂದಿದ್ದರು. ಅವರು ಮೊದಲೇ ಪೆಟ್ರೋಲ್ ಬಾಂಬ್ ಸಿದ್ಧಪಡಿಸಿಕೊಂಡು ಕಚೇರಿಯತ್ತ ಎಸೆದಿದ್ದಾರೆ. ಇಂದು ಬೆಳಿಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಚಂಡೀಗಢದಲ್ಲಿರುವ ಬಿಜೆಪಿ ಕಚೇರಿಯ ಮೇಲೆಯೂ ದಾಳಿ ನಡೆದಿತ್ತು. ಇದೀಗ ಸಂಗ್ರೂರಿನಲ್ಲೂ ಇದೇ ರೀತಿಯ ಘಟನೆ ನಡೆದಿರುವುದು ಸಂಗ್ರೂರ್ ಆಡಳಿತ ಮತ್ತು ಪಂಜಾಬ್ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ,” ಎಂದು ಹೇಳಿದ್ದಾರೆ.
ಇನ್ನೊಂದೆಡೆ, ಪಂಜಾಬ್ ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು ಕೂಡ ರಾಜ್ಯದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ಬಲ್ಲಿ ಪ್ರತಿಕ್ರಿಯಿಸಿರುವ ಅವರು, “ಮುಖ್ಯಮಂತ್ರಿ ಭಗವಂತ್ ಮಾನ್ ಅವರ ತವರೂರು ಸಂಗ್ರೂರಿನಲ್ಲೇ ಬಿಜೆಪಿ ಕಚೇರಿಯ ಮೇಲೆ ನಡೆದಿರುವ ಪೆಟ್ರೋಲ್ ಬಾಂಬ್ ದಾಳಿ, ಪಂಜಾಬ್ನ ಕಾನೂನು ಮತ್ತು ಸುವ್ಯವಸ್ಥೆಯ ನೈಜ ಸ್ಥಿತಿಯನ್ನು ಬಯಲು ಮಾಡಿದೆ. ಭಗವಂತ್ ಮಾನ್ ಜೀ, ಇದೇನಾ ನಿಮ್ಮ ‘ರಂಗ್ಲಾ ಪಂಜಾಬ್’? ಇಂತಹ ಹೇಡಿತನದ ಕೃತ್ಯಗಳಿಂದ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ಪಂಜಾಬ್ನ ಶಾಂತಿಯೊಂದಿಗೆ ಆಟವಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.
ಪ್ರಕರಣದ ತನಿಖೆಯನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ಮುಂದುವರಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ