ಪಾವಗಡ: ಶಸ್ತ್ರಚಿಕಿತ್ಸೆ ಬಳಿಕ 3 ಮಹಿಳೆಯರ ಸಾವು; ಮೂವರು ಸಿಬ್ಬಂದಿ ವಜಾ

ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಪೂಜಾ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ತಂತ್ರಜ್ಞ ಬಿ.ಆರ್.ಕಿರಣ ಎಂಬವರನ್ನು ಅವರನ್ನು ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಅವರನ್ನು ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಸೋಂಕು ಹರಡಿ ಮಹಿಳೆಯರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಶಸ್ತ್ರ ಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದಿದೆ ಎಂದು ಅವರು ವರದಿಯಲ್ಲಿ ಉಲ್ಲೇಖಿಸಿದ್ದರು. ಈ ವರದಿ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಫೆಬ್ರವರಿ 22ರಂದು ಏಳು ಮಹಿಳೆಯರು ಗರ್ಭಕೋಶದ ಚಿಕಿತ್ಸೆ, ಸಂತಾನಹರಣ ಮತ್ತು ಸಿಸೇರಿಯನ್​ ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪೈಕಿ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement