ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರಾದ ಮಳೆ ಮುನ್ಸೂಚನೆ : 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ಗುರುವಾರ (ಮೇ 28) ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂಬರುವ ಕೆಲವು ದಿನಗಳವರೆಗೆ ಬಲವಾದ ಗಾಳಿ, ಗುಡುಗು ಸಹಿತ ಮಳೆ ಮತ್ತು ತೀವ್ರ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿದೆ.
ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಶ್ಲೇಷಣೆಯ ಪ್ರಕಾರ, ಅರಬ್ಬೀ ಸಮುದ್ರದಿಂದ ಬೀಸುತ್ತಿರುವ ತೇವಾಂಶ ಭರಿತ ಗಾಳಿ ಮತ್ತು ನೈಋತ್ಯ ಮುಂಗಾರು ಪ್ರವೇಶಕ್ಕೂ ಮುನ್ನ ಉಂಟಾಗಿರುವ ಹವಾಮಾನದ ಕ್ಷಿಪ್ರ ಬದಲಾವಣೆಗಳಿಂದಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಒಂಬತ್ತು ಜಿಲ್ಲೆಗಳನ್ನು ಹೊರತುಪಡಿಸಿ, ರಾಜಧಾನಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮೇ 29ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಇದೇ ರೀತಿಯ ಹವಾಮಾನ ಪರಿಸ್ಥಿತಿಯು ದಕ್ಷಿಣ ಒಳನಾಡಿನಲ್ಲಿಯೂ ಮುಂದುವರೆಯುವ ನಿರೀಕ್ಷೆಯಿದೆ.
ಮೇ 29 ಮತ್ತು ಮೇ 31 ರ ನಡುವೆ ಗಾಳಿಯ ತೀವ್ರತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಬಹುದಾದರೂ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement