ಶಿರಸಿ : ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಸೋಮವಾರ 11:30ಕ್ಕೆ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ರೈತರ ಪ್ರತಿಭಟನೆ ನಡೆಸಲು ರೈತ ಸಂಘ ಉದ್ದೇಶಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋಡಿಹಳ್ಳಿ ಚಂದ್ರಶೇಖರ ಶಿರಸಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಬಂಧಿಸಲಾಗಿದೆ.
2013ರಲ್ಲಿ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಹೋರಾಟದ (Mahadayi Protest) ವೇಳೆ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ರೈಲು ತಡೆ ನಡೆಸಲಾಗಿತ್ತು. ಕೆಲ ಗಂಟೆಗಳ ಕಾಲ ಎಲ್ಲಾ ರೈಲುಗಳನ್ನು ತಡೆದು ರೈತರು ಹೋರಾಟ ಮಾಡಿದ್ದರು. ಈ ಸಂಬಂಧ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್ ಆಧಾರದ ಮೇಲೆ ಹುಬ್ಬಳ್ಳಿ ರೈಲ್ವೇ ಪೊಲೀಸರು (Hubballi Railway Police) ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿಸಿದ ನಂತರ ಕೋಡಿಹಳ್ಳಿ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಅವರನ್ನು ಇಂದು, ಸೋಮವಾರ (ಸೆ.28) ಹುಬ್ಬಳ್ಳಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ತಿಳಿದುಬರಬೇಕಿದೆ.


ನಿಮ್ಮ ಕಾಮೆಂಟ್ ಬರೆಯಿರಿ