ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ. ನಾಣು ಉಚ್ಚಾಟನೆ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ ದೇವೇಗೌಡ ಅವರು, ಕಾರ್ಯಕಾರಿಣಿಗೆ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಾಯಕರು ಹೊರತುಪಡಿಸಿ, ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ತಮಿಳುನಾಡು ಮತ್ತು ಬಿಹಾರ ರಾಜ್ಯಗಳ ನಾಯಕರು ಆಗಮಿಸಿದ್ದರು ಎಂದು ತಿಳಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಅವರನ್ನು ಅಮಾನತ್ತು ಮಾಡಲಾಗಿತ್ತು. ಇಂದು, ಶನಿವಾರ ಉಚ್ಚಾಟನೆ ಮಾಡಲಾಗಿದೆ. ಅದೇ ರೀತಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಪ್ರತ್ಯೇಕ ಸಭೆ ಕರೆದು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಹಾಗಾಗಿ, ಅವರನ್ನೂ ಸಹ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಪಕ್ಷ ಸಂಘಟನೆ ಹಾಗೂ ಬಲವರ್ಧಿಸಲು ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಡೆದ ಆರಂಭಿಕ ಸಭೆಗಳಲ್ಲಿ ಸಿ..ಎಂ, ಇಬ್ರಾಹಿಂ ಇದ್ದರು. ಬಳಿಕ ಅವರು ವ್ಯತಿರಿಕ್ತ ಹೇಳಿಕೆ ನೀಡಲು ಆರಂಭಿಸಿದ್ದರಿಂದ ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ರಾಜ್ಯಾಧ್ಯಕ್ಷರನ್ನೊಳಗೊಂಡ ಜೆಡಿಎಸ್ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಲಾಗಿತ್ತು ಎಂದು ದೇವೇಗೌಡ ಅವರು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ದೇವೇಗೌಡರು ಮತ್ತು ಕುಮಾರಸ್ವಾಮಿ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದ ಸಿ.ಎಂ. ಇಬ್ರಾಹಿಂ ಬಹಿರಂಗ ಹೇಳಿಕೆ ನೀಡಿದ್ದರು. ಪ್ರತ್ಯೇಕ ಸಭೆ ನಡೆಸಿದ್ದರು. ನಂತರ ದೇವೇಗೌಡರು ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಿದ್ದರು.
ಡಿಸೆಂಬರ್ 11ರಂದು ನಾಣು ಅವರು ಜೆಡಿಎಸ್ ಕಾರ್ಯಕಾರಿಣಿ ಸಭೆ ಕರೆದಿರುವುದಾಗಿ ಸಿ.ಎಂ. ಇಬ್ರಾಹಿಂ ಶುಕ್ರವಾರ ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಇಬ್ಬರನ್ನೂ ದೇವೇಗೌಡರು ಪಕ್ಷದಿಂದ ಉಚ್ಚಾಟಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement