ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ.
ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರೆದುರು ಪ್ರಕರಣ ಪ್ರಸ್ತಾಪಿಸಿದಾಗ ಶುಕ್ರವಾರ ಆಲಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ಬಾನು ಅವರು ಈ ಹಿಂದೆ ಹಿಂದೂ ವಿರೋಧಿ ಹೇಳಿಕೆ ನೀಡಿದ್ದರಿಂದ ಅವರು ದಸರಾ ಉದ್ಘಾಟಿಸುವುದು ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ದೂರಿದ್ದ ಅರ್ಜಿಗಳನ್ನು ಸೆಪ್ಟೆಂಬರ್ 15 ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಅರ್ಜಿಯನ್ನು ತಿರಸ್ಕರಿಸಿತ್ತು.
ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಗುರುವಾರ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮುಂದೆ ವಕೀಲರೊಬ್ಬರು ಈ ವಿಷಯವನ್ನು ಪ್ರಸ್ತಾಪಿಸಿ, ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವುದರಿಂದ ತುರ್ತು ಪಟ್ಟಿಗೆ ಅರ್ಜಿ ಸಲ್ಲಿಸುವಂತೆ ಕೋರಲಾಯಿತು. “ದಸರಾ ಉತ್ಸವದ ಉದ್ಘಾಟನೆಗೆ ಹಿಂದೂಯೇತರ ವ್ಯಕ್ತಿಯನ್ನು ಆಹ್ವಾನಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುತ್ತಿದ್ದೇವೆ. ಈ ಕಾರ್ಯಕ್ರಮ ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದು, ಅದಕ್ಕಾಗಿಯೇ ನಾವು ತುರ್ತು ವಿಚಾರಣೆಗೆ ವಿನಂತಿಸುತ್ತಿದ್ದೇವೆ” ಎಂದು ವಕೀಲರು ವಾದಿಸಿದರು. ಪ್ರಕರಣವನ್ನು ಶುಕ್ರವಾರ (ಸೆಪ್ಟೆಂಬರ್ 19) ಪಟ್ಟಿ ಮಾಡಲಾಗುವುದು ಎಂದು ಸಿಜೆಐ ಸೂಚಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ