ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಬದ್ಧ, ನೇಮಕಾತಿಗೆ ಅಧಿವೇಶನದಲ್ಲಿ ಪ್ರಸ್ತಾವನೆ ಮಂಡನೆ: ನೂತನ ಶಿಕ್ಷಣ ಸಚಿವ ನಾಗೇಶ

ಯಾದಗಿರಿ : ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.
ಅವರು ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಅವರು, ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ  ಶನಿವಾರ   ಸುದ್ದಿಗಾರರ ಜೊತೆಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ. ಈ ಭಾಗದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಕಾರಣ ಬೇರೆ ಜಿಲ್ಲೆಯವರು ನೇಮಕಾತಿಯಾಗುತ್ತಾರೆ. ಇದರಿಂದ ಈ ಭಾಗದ ಅಭ್ಯರ್ಥಿಗಳಿಗೂ ಮತ್ತು ಶಿಕ್ಷಣ ಕ್ಷೇತ್ರಕ್ಕೂ ಹಿನ್ನಡೆಯಾಗುತ್ತಿದೆ. ಮಾಜಿ ಸಚಿವ ಸುರೇಶಕುಮಾರ ಅವರು ತೆಗೆದುಕೊಂಡ ನಿರ್ಧಾರಗಳನ್ನು ಪರಿಶೀಲಿಸಿ ನಂತರ ಈ ಭಾಗದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲಾಗುವುದು. ಅದಕ್ಕಾಗಿ ಬರುವ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ನನ್ನ ಮೇಲೆ ನಂಬಿಕೆ ಇಟ್ಟು ಶಿಕ್ಷಣ ಖಾತೆಯನ್ನು ನೀಡಿದ್ದಾರೆ. ಅದಕ್ಕಾಗಿ ಮಾಜಿ ಶಿಕ್ಷಣ ಸಚಿವ ಸುರೇಶ ಕುಮಾರ, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಿಕ್ಷಣ ತಜ್ಙರ ಜೊತೆಗೆ ಸಂಪರ್ಕದಲ್ಲಿದ್ದು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.
ಇನ್ನು ಎರಡು ಮೂರು ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿಗಳು ಶಾಲೆಗಳ ಪ್ರಾರಂಭ ಕುರಿತು ಹೇಳಿದ್ದಾರೆ. ಅದರಂತೆ ತಜ್ಞರ ಜೊತೆಗೆ ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಮೂರನೆಯ ಅಲೆ ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಅದರಂತೆ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement