ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಭೇಟಿ | ಅವೈಜ್ಞಾನಿಕ ಕಾಮಗಾರಿಗೆ ಬಗ್ಗೆ ಕೇಂದ್ರ ಸಚಿವ ಗಡ್ಕರಿಗೆ ಪತ್ರ -ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವೈಜ್ಞಾನಿಕ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಪ್ರಾದೇಶಿಕ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಕತ್ತರಿಸಿರುವುದಕ್ಕೆ ಅಸಮಾಧಾನಗೊಂಡರು. ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್‌ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದ ಅವರು ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿಗೆ ಅನೇಕ ಪ್ರಶ್ನೆಗಳನ್ನು ಕೇಳಿದರು.

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?, ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯಿಂದ ಇದಕ್ಕೆ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಶಿರಾಡಿ ಘಾಟ್‌ ಗೆ ಭೇಟಿ ಬಳಿಕ ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ”ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಇಂದು ಭೇಟಿನೀಡಿ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.
ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಈವರೆಗೆ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಇಲ್ಲಿನ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇವೆ. ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನಾವು ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement