ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸೋಮವಾರ ಶಿಕ್ಷಣ ನೀತಿ ಕುರಿತಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಿತಿ ರಚನೆ ಮಾಡುವ ವಿಷಯವನ್ನು ತಿಳಿಸಿದರು. ಶಿಕ್ಷಣದ ಕುರಿತು ಕೇಂದ್ರ ಸರ್ಕಾರಕ್ಕೆ ನೀತಿ ರೂಪಿಸಲು ಅಧಿಕಾರವಿಲ್ಲ. ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ರಾಜ್ಯಗಳ ಮೇಲೆ ಹೇರಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.
ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವುದು ಸಾಧ್ಯವಿಲ್ಲ. ಆದ್ದರಿಂದ ಈಗ ಹಳೆ ಶಿಕ್ಷಣ ಪದ್ಧತಿ ಮುಂದುವರಿಸಿ, ಹೊಸ ಶಿಕ್ಷಣ ನೀತಿ ರೂಪಣೆಗೆ ಸಮಿತಿ ರಚಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.
ನಿಮ್ಮ ಕಾಮೆಂಟ್ ಬರೆಯಿರಿ