
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಉಂಟಾಗಿರುವ ವಿಕೋಪ ಪರಿಸ್ಥಿತಿ ನಿಗ್ರಹಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ನಡೆಸಿದ ಸಭೆಯಲ್ಲಿ
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಿದ್ದಾರೆ. ಸೋಮವಾರ ಹೈಸ್ಕೂಲ್ ಬಳಿ ಕಟ್ಟೆಚ್ಚರ ವಹಿಸಿ. ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಸಂಘಟನೆಗಳ ಮೇಲೆ ನಿಗಾ ಇಡಿ. ಇಲಾಖೆಗಳ ನಡುವೆ ಸಮನ್ವಯತೆ ಇರಲಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಹಿಜಾಬ್, ಕೇಸರಿ ಶಾಲು ವಿಚಾರದಲ್ಲಿ ಗಲಾಟೆಯಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಿ ಎಂದು ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಗೃಹ ಇಲಾಖೆ ಎಸಿಎಸ್ ರಜನೀಶ್ ಗೋಯಲ್, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಭಾಗವಹಿಸಿದ್ದರು.
ಸೋಮವಾರದಿಂದ 9, 10ನೇ ತರಗತಿಗಳು ಮತ್ತೆ ಆರಂಭವಾಗಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು, ಎಸ್ಪಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಾಲೆಗಳ ಸುತ್ತಮುತ್ತ ಸಹ ಪೊಲೀಸ್ ಭದ್ರತೆ ನೀಡಬೇಕು ಎಂದು ಸೂಚನೆ ಕೊಡಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವಂತೆಯೂ ಡಿಸಿ, ಎಸ್ಪಿ, ಸಿಇಒ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸುವಂತೆ ಹೇಳಲಾಗಿದೆ. ವದಂತಿ ಹರಡುವವರ ಬಗ್ಗೆ ನಿಗಾವಹಿಸಲು ಸಿಎಂ ಸೂಚಿಸಿದ್ದಾರೆ. ಕೆಲವು ಮಕ್ಕಳು, ಪೋಷಕರು ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆ. ಮತೀಯ ಸಂಘಟನೆಗಳ ಜತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹಸಚಿವರು ತಿಳಿಸಿದ್ದಾರೆ.
ಸೂಕ್ಷ್ಮ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾಂಶುಪಾಲರು, ಪೋಷಕರ ಜತೆ ಡಿಡಿಪಿಐ ಸಂಪರ್ಕ ಹೊಂದಿರಬೇಕು. ಶಾಂತಿ ಸಭೆ ನಡೆಸಿ ಹೈಕೋರ್ಟ್ ಆದೇಶ ಪಾಲನೆಗೆ ತಿಳಿಸಬೇಕು. ಯಾವುದೇ ಒತ್ತಡಕ್ಕೆ ಸ್ಥಳೀಯ ಆಡಳಿತ ಮಣಿಯಬಾರದು ಎಂದು ಹೇಳಿದ್ದಾರೆ.
ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ಕೊಡಲಾಗಿದೆ. ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಕ್ರಮಕೈಗೊಳ್ಳುವುದು. ಧಾರ್ಮಿಕ ಮುಖಂಡರ ಜೊತೆ ಸೇರಿ ಶಾಂತಿ ಸಭೆ ನಡೆಸುವುದು. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು ನೀಡುತ್ತೇವೆ. ಪರಿಸ್ಥಿತಿ ಗಮನಿಸಿ ಒಂದೆರಡು ದಿನಗಳಲ್ಲಿ ನಿರ್ಧಾರ ತಿಳಿಸುತ್ತೇವೆ ಎಂದು ಸಭೆ ನಂತರ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ