ಭಾರಿ ಮಳೆಗೆ ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತಗಳು ಸಂಭವಿಸುತ್ತಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರವನ್ನು  ಬಂದ್ ಮಾಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದೆ. ಹೀಗಾಗಿ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಜೆಸಿಬಿ ಮೂಲಕ ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ತೆರವುಗೊಳಿಸಲಾಗುತ್ತಿದ್ದು, ಭಾರಿ ಮಳೆಯಾಗುತ್ತಿರುವುದು ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಶಿವಮೊಗ್ಗ-ಶೃಂಗೇರಿ, ನೆಮ್ಮಾರು ಮತ್ತು ಎಸ್‌ಕೆ ಬಾರ್ಡರ್ ಮೂಲಕ ಮಂಗಳೂರಿಗೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬಿದರಗೋಡು, ಆಗುಂಬೆ ಮತ್ತು ಉಡುಪಿ ಮಾರ್ಗವಾಗಿ ಮಂಗಳೂರಿಗೆ ಸಂಚರಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement