ಕೆಎಟಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ನೇಮಕ

ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಟಿ) ಅಧ್ಯಕ್ಷರನ್ನಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ಅವರನ್ನು ನೇಮಕ ಮಾಡಲಾಗಿದೆ.
ಬೂದಿಹಾಳ್‌ ಕೆಎಟಿಯ ಹಂಗಾಮಿ ಅಧ್ಯಕ್ಷರಾಗಿದ್ದು, ಅವರನ್ನೇ ನಾಲ್ಕು ವರ್ಷಗಳವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾದ ಬಳಿಕ ನ್ಯಾ. ಆರ್ ಬಿ ಬೂದಿಹಾಳ ಅವರನ್ನು 2019ರ ಜೂನ್‌ 12ರಂದು ಕೆಎಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು. ಕೆಎಟಿ ಅಧ್ಯಕ್ಷರಾಗಿದ್ದ ಡಾ. ಕೆ ಭಕ್ತವತ್ಸಲ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಿವೃತ್ತಿ ಹೊಂದಿದ ನಂತರ ಬೂದಿಹಾಳ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿತ್ತು.
ಬೂದಿಹಾಳ ಅವರು 1983ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಎರಡೂ ವಿಭಾಗದಲ್ಲಿ ಪ್ರಾಕ್ಟೀಸ್‌ ಮಾಡಿದ್ದರು. 1996ರ ಮೇನಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ನೇಮಕವಾದ ಅವರು ಬೆಂಗಳೂರು ಮತ್ತು ಕಲಬುರ್ಗಿಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ಕರ್ತವ್ಯ ನಿಭಾಯಿಸಿದ್ದರು. ಗದಗ, ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಬೆಳಗಾವಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.
ನ್ಯಾಯಿಕ ರಿಜಿಸ್ಟ್ರಾರ್‌, ವಿಚಕ್ಷಣಾ ರಿಜಿಸ್ಟ್ರಾರ್‌, ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್‌ ಜನರಲ್‌ಗೆ ಕಾರ್ಯದರ್ಶಿಯಾಗಿಯೂ ಬೂದಿಹಾಳ್‌ ಅವರು ಸೇವೆ ಸಲ್ಲಿಸಿದ್ದಾರೆ. 2013ರ ಅಕ್ಟೋಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾದ ಅವರು 2016ರ ಮಾರ್ಚ್‌ನಲ್ಲಿ ಕಾಯಂ ನ್ಯಾಯಮೂರ್ತಿಯಾಗಿದ್ದು, 2018ರ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ್ದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement