ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌
ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಾಧ್ಯಮದವರೊಂದೊಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಹೆಚ್‌‌‌.ಕೆ.ಪಾಟೀಲ ಅವರು, ರಾಜ್ಯದಲ್ಲಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ ಫೈರ್‌ ಸೆಸ್‌ (Fire Cess) ವಿಧಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ಅಗ್ನಿಶಾಮಕ (ತಿದ್ದುಪಡಿ) ವಿಧೇಯಕ 2025 ಮಂಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಲ್ಲಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ ಫೈರ್‌ ಸೆಸ್‌ ವಿಧಿಸಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಹೊಸ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆ ಮೇಲೆ 1% ಅಗ್ನಿಶಾಮಕ ಸೆಸ್ ಹಾಕಲು ತೀರ್ಮಾನಿಸಲಾಗಿದೆ ಎಂದರು. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ 2025ಕ್ಕೆ ಸಹ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್
ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸುವುದಕ್ಕಾಗಿ ಕೆರೆಯ ಬಫರ್ ಜೋನ್‌ನಲ್ಲಿ ಹಾಗೂ ಕೆರೆಯಲ್ಲಿ ಸಾರ್ವಜನಿಕ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು.
ಅಲ್ಲದೆ, ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 20 ಕೋಟಿ ರೂ. ಗಳ ಸಿವಿಲ್ ಕಾಮಗಾರಿ ಹಾಗೂ 30 ಕೋಟಿ ರೂ.ಗಳ ಉಪಕರಣಗಳ ಖರೀದಿ ಸೇರಿದಂತೆ 50 ಕೋಟಿ ರೂ.ವೆಚ್ಚದಲ್ಲಿ ಕಿದ್ವಾಯಿ ಫೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಸ್ಥಾಪಿಸಲು ಹೆಚ್ಚುವರಿಯಾಗಿ ಅವಶ್ಯವಿರುವ ವೈದ್ಯಕೀಯ ಉಪಕರಣ, ಪೀಠೋಪಕರಣ ಹಾಗೂ ಇತರೆ ಬಾಬ್ತುಗಳ ಒಟ್ಟರೆ ಅಂದಾಜು ವೆಚ್ಚಕ್ಕೆ 62 ಕೋಟಿಗಳ ಆಡಳಿತಾತ್ಮಕ ಒಪ್ಪಿಗೆ ನೀಡಲಾಯಿತು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ಸಿನ ಐವರು, ಬಿಜೆಪಿಯ ಇಬ್ಬರಿಗೆ ಗೆಲುವು ; ಜೆಡಿಎಸ್‌ಗೆ ಸೋಲು

ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ 0.512 ಟಿಎಂಸಿ ನೀರನ್ನು ಸಂಗ್ರಹಣಾ ಸ್ಥಳಕ್ಕೆ ಪೂರೈಸಲು ಅರಸೀಕೆರೆ ತಾಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ ರೂ.148.80 ಕೋಟಿಗಳ ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಒಪ್ಪಿಗೆ ಸೂಚಿಸಲಾಯಿತು.ಖಾಸಗಿ ಆಂಬ್ಯುಲೆನ್ಸ್ ಸೇವಾ ನಿರ್ವಾಹಕರನ್ನು ನಿಯಂತ್ರಿಸಲು ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯೆಂದು ನೋಂದಾಯಿಸಲು ಅವಶ್ಯಕವಾಗಿರುವ ಮತ್ತು ಮೂವತ್ತು ದಿನಗಳೊಳಗಾಗಿ ಖಾಯಂ ನೋಂದಣಿ ನೀಡಲು ತಿದ್ದುಪಡಿಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ. 2025-26ನೇ ಸಾಲಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಬೇಡಿಕೆಗಳಿಗನುಸಾರವಾಗಿ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ರೂ. 880.68 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಟೆಂಡರ್ ಮೂಲಕ ಸಂಗ್ರಹಿಸಿ, ಸರಬರಾಜು ಮಾಡಲು ಹಾಗೂ ಅಗತ್ಯವಿರುವ ಅನುದಾನವನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ ಒದಗಿಸಲು ಅನುಮೋದನೆ ನೀಡಲಾಯಿತು ಎಂದು ಎಚ್‌.ಕೆ.ಪಾಟೀಲ ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 46 ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೆ ಸಮ್ಮತಿ ನೀಡಲಾಗಿದೆ. ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) 2025 ಮಸೂದೆಯನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಅನುಮೋದನೆ ನೀಡಲಾಗಿದೆ.ದಿ.ಶಂಕರನಾಗ್ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ “ರಂಗಶಂಕರ” ಸಂಸ್ಥೆಯ ಗುತ್ತಿಗೆ ನವೀಕರಣಕ್ಕೆ ಸಮ್ಮತಿ ನೀಡಲಾಯಿತು. ಜೆ.ಪಿ ನಗರ 2ನೇ ಹಂತದ ಬಡಾವಣೆಯಲ್ಲಿನ 1354.50 ಚ.ಮೀ ವಿಸ್ತೀರ್ಣದ ನಾಗರೀಕ ಸೌಲಭ್ಯ ನಿವೇಶನಕ್ಕೆ ಬಿಡಿಎ ವಿಧಿಸಿರುವ ಒಟ್ಟಾರೆ ಗುತ್ತಿಗೆ ಮೌಲ್ಯ / ವರ್ಷಾಸನದ ಶೇ.25 ರಷ್ಟು ಮೊತ್ತವನ್ನು ಮತ್ತು ಅದಕ್ಕೆ ಅನ್ವಯಿಸುವ ಜಿ.ಎಸ್.ಟಿ ಅನ್ನು ಗುತ್ತಿಗೆ ಮೌಲ್ಯವಾಗಿ ಪಾವತಿಸಿಕೊಂಡು ಗುತ್ತಿಗೆ ನವೀಕರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement