ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕ್ಷಾಂಕಿಯಾಗಿದ್ದರು. ಆದರೆ ಪಕ್ಷದ ಹೈಕಮಾಂಡ್ ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್​ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಜಬ್ಬಾರ್ ಅಸಮಾಧಾನಗೊಂಡಿದ್ದರು.

ತೀವ್ರ ದುಃಖದಿಂದ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಈ ಪತ್ರ ಬರೆಯುತ್ತಿದ್ದೇನೆ. ದುರದೃಷ್ಟವಶಾತ್, 2026ರ ಉಪಚುನಾವಣೆಯ ವೇಳೆ ದಾವಣಗೆರೆ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ನಿರ್ಧಾರಕ್ಕೆ ಬರಲು ಕಾರಣವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತರು ತೀವ್ರ ನಿರಾಸೆಗೊಂಡಿದ್ದಾರೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅಂಗೀಕರಿಸಿದ್ದಾರೆ.

ಅಲ್ಲದೆ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ (KPCC Minority Department) ಕೆಪಿಸಿಸಿ ವಿಸರ್ಜಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ‘ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷ ಸ್ಥಾನಕ್ಕೆ ಕೆ. ಅಬ್ದುಲ್ ಜಬ್ಬಾರ್ ಅವರು ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ವಿಭಾಗದ ಅಡಿಯಲ್ಲಿ ಬರುವ ರಾಜ್ಯ, ಜಿಲ್ಲಾ ಮತ್ತು ವಿಧಾನಸಭೆ/ಬ್ಲಾಕ್ ಮಟ್ಟದಲ್ಲಿ ರಚಿಸಲಾದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಲಾಗಿದೆ. ಸಂಘಟನೆ ಮತ್ತು ಪಾಲುದಾರರೊಂದಿಗೆ ಸೂಕ್ತ ಸಮಾಲೋಚನೆಯ ನಂತರ, ಸಾಧ್ಯವಾದಷ್ಟು ಬೇಗ ಹೊಸ ಸಮಿತಿಯನ್ನು ರಚಿಸಲಾಗುವುದು’ ಎಂದು ಹೇಳಿದೆ. ಈ ಬೆಳವಣಿಗೆ ಕಾಂಗ್ರೆಸ್​​ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಮತದಾನದ ಮುಗಿಯುತ್ತಿದ್ದಂತೆ ಅಲ್ಪಸಂಖ್ಯಾತ ನಾಯಕರು ಬಹಿರಂಗವಾಗಿಯೇ ಪರಸ್ಪರ ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ಅಲ್ಫಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement