
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಒಟ್ಟು 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮತ್ತೆ ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತರಾಗಿರುವ ಮೇಜರ್ ಮಣಿವಣ್ಣನ್ ಪಿ ಅವರಿಗೆ ತಮ್ಮ ಪ್ರಸ್ತುತ ಹುದ್ದೆಯ ಜೊತೆಗೆ ‘ನಗರ ಭೂ ಸಾರಿಗೆ ನಿರ್ದೇಶನಾಲಯ’ದ ಆಯುಕ್ತರ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾಗಿದ್ದ ಇಮ್ಕಾಂಗ್ಲಾ ಜಮೀರ್ ಎಂ. ಅವರಿಗೆ ನವದೆಹಲಿಯ ಕರ್ನಾಟಕ ಭವನದ ಕಾರ್ಯದರ್ಶಿ (ಸಮನ್ವಯ)ಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಡಾ. ಪ್ರಸಾದ ಎನ್. ವಿ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ (ತುಳಸಿ ಮದ್ದಿನೇನಿ ಅವರ ಜಾಗಕ್ಕೆ) ನೇಮಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಮೀರ ಶುಕ್ಲಾ ಅವರನ್ನು ನವದೆಹಲಿಯ ಕರ್ನಾಟಕ ಭವನದ ಸ್ಥಾನೀಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ತುಳಸಿ ಮದ್ದಿನೇನಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಪಂಚಾಯತ್ ರಾಜ್ ವಿಭಾಗದ ಕಾರ್ಯದರ್ಶಿಯಾಗಿದ್ದ ರಣದೀಪ ಡಿ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ (ಸಮೀರ್ ಶುಕ್ಲಾ ಅವರ ಜಾಗಕ್ಕೆ) ನೇಮಿಸಲಾಗಿದೆ. ಜೊತೆಗೆ, ತಾವು ಈ ಹಿಂದೆ ನಿರ್ವಹಿಸುತ್ತಿದ್ದ ಪಂಚಾಯತ್ ರಾಜ್ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ನೀಡಲಾಗಿದೆ.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಕುಮಾರ ಕೆ. ಬಿ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಖಜಾನೆ ಇಲಾಖೆಯ ಆಯುಕ್ತರಾಗಿದ್ದ ರಘುನಂದನಮೂರ್ತಿ ಅವರನ್ನು ಬಿಎಂಟಿಸಿ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಅಲ್ಲದೆ, ಅವರು ಈ ಮೊದಲು ನಿರ್ವಹಿಸುತ್ತಿದ್ದ ಖಜಾನೆ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಸಹ ಅವರಿಗೆ ನೀಡಲಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ. ರಾಮಪ್ರಸಾತ ಮನೋಹರ ವಿ ಅವರಿಗೆ ಈ ಹುದ್ದೆಯ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾಗಿದ್ದ ಡಾ. ಸತೀಶ ಬಿ. ಸಿ. ಅವರನ್ನು ಕೃಷಿ ಇಲಾಖೆಯ ಆಯುಕ್ತರಾಗಿ ನೇಮಿಸಲಾಗಿದೆ. ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಅಕ್ರಂ ಪಾಷಾರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಮತ್ತು ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ನೇಮಿಸಲಾಗಿದೆ.
ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ನಿತೀಶ ಕೆ ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅಲ್ಲದೆ, ಅವರಿಗೆ ಬಿಬಿಎಂಪಿಯ ವಿಶೇಷ ಆಯುಕ್ತರ (ಆರೋಗ್ಯ ಮತ್ತು ಶಿಕ್ಷಣ) ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ.
ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಪುನರ್ವಸತಿ ಮತ್ತು ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿದ್ದ ಗಜಾನನ ಬಾಲೆ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಹಿಂದಿನ ಹುದ್ದೆಯ (ಯುಕೆಪಿ ಪ್ರಧಾನ ವ್ಯವಸ್ಥಾಪಕ) ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ವಹಿಸಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಜ್ಞಾನೇಂದ್ರ ಕುಮಾರ ಗಂಗ್ವಾರ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ ಬರುವ ಎಂಎಸ್ಎಂಇ (ಎಂಎಸ್ಎಂಇ) ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ