ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ.
ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸ್ಫೂರ್ತಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ಸುಧಾಕರ ಉದ್ಯಮಿಯಾಗಿದ್ದರು. ತಂದೆ ದಶರತಯ್ಯ ಜೊತೆ ಸೇರಿ ಡಿಸ್ಟಿಲ್ ಉದ್ಯಮ ಆರಂಭಿಸಿದ್ದರು. ‘ಸೆವೆನ್ ಹಿಲ್ಸ್’ ಹೆಸರಿನ ಸ್ವಂತ ಕಂಪನಿ ಹೊಂದಿದ್ದ ಇವರು ಬೆಂಗಳೂರು ಮತ್ತು ನೆಲಮಂಗಲ ಭಾಗದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಹೊಂದಿದ್ದರು. ಚಳ್ಳಕೆರೆಯಲ್ಲಿ ಇವರಿಗೆ ಎರಡು ಆಯಿಲ್ ಮಿಲ್ ಇದೆ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ನಡೆಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದರು.
ರಾಜಕೀಯ ಪಯಣ…
2004ರಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಕ್ಷೇತ್ರಕ್ಕೆ ಮೀಸಲಾತಿ ನಿಗದಿಯಾದಾಗ ಹಿರಿಯೂರು ಕ್ಷೇತ್ರಕ್ಕೆ ಸ್ಥಳಾಂತರಗೊಂಡ ಅವರು 2008ರಲ್ಲಿ ಅಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದರು. 2008ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಇವರು, ಸಮಾಜ ಕಲ್ಯಾಣ ಸಚಿವರಾದರು. ನಂತರ ಮುಜರಾಯಿ ಖಾತೆ ಸಚಿವರಾದರು. 2013ರಲ್ಲಿ ಕಾಂಗ್ರೆಸ್ ಸೇರಿ ಹಿರಿಯೂರಿನಲ್ಲಿ ಗೆದ್ದರು. 2018ರಲ್ಲಿ ಕೆ. ಪೂರ್ಣಿಮಾ ಶ್ರೀನಿವಾಸ ವಿರುದ್ಧ ಸೋಲನುಭವಿಸಿದರೂ, 2023ರ ಚುನಾವಣೆಯಲ್ಲಿ ಮತ್ತೆ ಪೂರ್ಣಿಮಾ ಅವರನ್ನೇ ಸೋಲಿಸಿ ಶಾಸಕರಾಗಿ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ