ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಯೋಧರು ಹುತಾತ್ಮ, ಗ್ರೆನೇಡ್‌ ಬಳಸಿರುವ ಸಾಧ್ಯತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಸೇನಾ ವಾಹನವು ಪೂಂಚ್ ಜಿಲ್ಲೆಯ ಭಿಂಬರ್ ಗಲಿಯಿಂದ ಸಾಂಗಿಯೋಟ್‌ಗೆ ತೆರಳುತ್ತಿದ್ದಾಗ ಅಪರಿಚಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು, ಗುರುವಾರ ರಾಜೌರಿ ಸೆಕ್ಟರ್‌ನ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಹೋಗುತ್ತಿದ್ದ ಸೇನಾ ವಾಹನದ ಮೇಲೆ ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ, ಭಾರೀ ಮಳೆಯಿಂದಾಗಿ ಪ್ರದೇಶದಲ್ಲಿ ಕಡಿಮೆ ಗೋಚರತೆಯ ಲಾಭ ಪಡೆದು ಅವರು ದಾಳಿ ನಡೆಸಿದ್ದಾರೆ. ಸಂಭಾವ್ಯ ಗ್ರೆನೇಡ್‌ ಬಳಕೆಯಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೆಚ್‌ಕ್ಯು ನಾರ್ದರ್ನ್ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ ಹುತಾತ್ಮರಾದ ಸೇನಾ ಯೋಧರು ರಾಷ್ಟ್ರೀಯ ರೈಫಲ್ಸ್ ಘಟಕದವರಾಗಿದ್ದು, ಆ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.
ಘಟನೆಯಲ್ಲಿ ಇನ್ನೋರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ತಕ್ಷಣವೇ ರಾಜೌರಿಯ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೈನಿಕರು ಭಯೋತ್ಪಾದಕರ ದಾಳಿಗೆ ಒಳಗಾದ ಬೆಂಗಾವಲು ಪಡೆಯ ಭಾಗವಾಗಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಜೈಶ್ ಬೆಂಬಲಿತ ಭಯೋತ್ಪಾದಕ ಗುಂಪು ಪೀಪಲ್ಸ್ ಎಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸೇನಾ ವಾಹನದ ಮೇಲೆ 50 ಸುತ್ತು ಗುಂಡು ಹಾರಿಸಲಾಗಿದೆ.

ಪ್ರಮುಖ ಸುದ್ದಿ :-   ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಭಯೋತ್ಪಾದಕ ದಾಳಿಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಮೇ ತಿಂಗಳಲ್ಲಿ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್‌ನ ಸಭೆಯ ಮುನ್ನ ಈ ಭಯೋತ್ಪಾದಕ ದಾಳಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಐವರು ಸೇನಾ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದಾಳಿಯನ್ನು ಖಂಡಿಸಿದ್ದಾರೆ. ಪೂಂಛ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕರ್ತವ್ಯದಲ್ಲಿದ್ದ 5 ಸೈನಿಕರ ಪ್ರಾಣವನ್ನು ಬಲಿತೆಗೆದುಕೊಂಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಹೇಯ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ ಮತ್ತು ಇಂದು ಸತ್ತವರ ಪ್ರೀತಿಪಾತ್ರರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement