ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ನಂತರ ರವಿಕುಮಾರ ರಾಜೀನಾಮೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ (Siddaramaiah) 65 ಕೋಟಿ ರೂ.ಗಳನ್ನು ಭೋವಿ ಸಮಾಜಕ್ಕೆ ಘೋಷಣೆ ಮಾಡಿದ್ದಾರೆ. ಆದರೆ ಕೇವಲ 13 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರು ಭೋವಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ ನಿಗಮದ ಅಧ್ಯಕ್ಷರೇ ಬ್ರೋಕರ್ ಜೊತೆಗೆ 60% ಕಮಿಷನ್‌ಗೆ ಬೇಡಿಕೆ ಇಟ್ಟಿರುವ ವಿಡಿಯೋ ಸಿಕ್ಕಿದೆ ಎಂದು ಅವರು ದೂರಿದ್ದರು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ರವಿಕುಮಾರ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದರು. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೆ ಎಂದು ಹೇಳಿದ್ದರು. ನಿಗಮದ ಅಧ್ಯಕ್ಷನಾದ ನಂತರ ನಾನು ಯಾರ ಬಳಿಯೂ ಕಮೀಷನ್‌ ಪಡೆದಿಲ್ಲ. ಎಐ ತಂತ್ರಜ್ಞಾನ ಬಳಸಿಕೊಂಡು ನನ್ನ ಮಾತುಗಳನ್ನು ತಿರುಚಲಾಗಿದೆ. ಈ ಪಿತೂರಿಯಲ್ಲಿ ನಿಗಮದ ಅಧಿಕಾರಿಗಳ ಪಾತ್ರವನ್ನು ಅಲ್ಲಗಳೆಯಲಾಗದು ಎಂದು ಹೇಳಿದ್ದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಾಸ್ತವ ಏನೆಂಬುದನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದರು.

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement