ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ʼಬಿʼ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಯಾಗಿದೆ.
ಈ ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಹೀಗಾಗಿ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಸಲ್ಲಿಸಿರುವ ಬಿ ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು. ಬಿ ರಿಪೋರ್ಟ್‌ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಿ, ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement